ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆಗಸ್ಟ್ 31ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಜಿಬಿಎ
ಚುನಾವಣೆ ನಡೆಸುವ ಕುರಿತಾಗಿ ರಾಜ್ಯ ಚುನಾವಣಾ ಆಯೋಗ ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದು, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ವೇಳಾಪಟ್ಟಿ ಪ್ರಕಟವಾದ ಕೂಡಲೇ ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.
ಮೂಲಗಳ ಪ್ರಕಾರ, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸಲು ಆಯೋಗ ಸಿದ್ಧತೆ ಮಾಡಿಕೊಂಡಿದ್ದು, ಜುಲೈ 10ರೊಳಗೆ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಶಿವಸೇನೆ ಭಿನ್ನಮತ ಬಿಕ್ಕಟ್ಟು ತೀವ್ರ: ಬಿಜೆಪಿ ವಿರುದ್ಧ ಆದಿತ್ಯ ಠಾಕ್ರೆ ಗಂಭೀರ ಆರೋಪ
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸಲು ನೀಡಿದ್ದ ಗಡುವನ್ನು, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಮತ್ತೊಮ್ಮೆ ಗಡುವು ವಿಸ್ತರಣೆ ಬೇಡ ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಹೆಚ್ಚುವರಿ ಕಾಲಾವಕಾಶ ಕೇಳಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಇದರ ನಡುವೆಯೇ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೆ ಸಿದ್ಧತೆಗಳನ್ನು ಮುಂದುವರಿಸಿದ್ದು, ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಪ್ರಮುಖ ಕಾರ್ಯಗಳು ನಡೆಯುತ್ತಿವೆ.
ರಾಜಕೀಯ ಪಕ್ಷಗಳಲ್ಲೂ ಚಟುವಟಿಕೆ ಗರಿಗೆದರಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಗೆ ಮನೆ ಮನೆಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಬಗ್ಗೆ ಮತದಾರರಿಗೆ ತಿಳಿಸುವಂತೆ ಸೂಚಿಸಿದೆ.
ಇನ್ನೊಂದೆಡೆ ಬಿಜೆಪಿ ಕೂಡ ಚುನಾವಣೆಗೆ ಸಜ್ಜಾಗಿದ್ದು, ಪಂಚ ಪಾಲಿಕೆಗಳಿಗೆ ಬೇಗ ಚುನಾವಣೆ ನಡೆದರೆ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ ಸಿಗಲಿದೆ ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಜೆಡಿಎಸ್ ಕೂಡ ಈ ಬಾರಿ ಉತ್ತಮ ಪ್ರದರ್ಶನದ ನಿರೀಕ್ಷೆಯೊಂದಿಗೆ ಚುನಾವಣಾ ರಣತಂತ್ರ ರೂಪಿಸುತ್ತಿದೆ.
ಇದನ್ನೂ ನೋಡಿ: ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ | ಮಹಿಳಾ ಮತ್ತು ಮಕ್ಕಳ ಕಲ್ಯಾಣ: ಘೋಷಣೆ ಎಷ್ಟು? ಸಾಧನೆ ಎಷ್ಟು? Janashakthi Media
