ಚಿಕ್ಕಮಗಳೂರು: ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಇಂದು ಶೃಂಗೇರಿ ಬಂದ್ ಕೈಗೊಳ್ಳಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕೆಂದು ಆಗ್ರಹಿಸಿದ್ದಾರೆ. ಕಳೆದ 14 ವರ್ಷಗಳಿಂದ ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗಾಗಿ ಜನರು ಆಗ್ರಹಿಸುತ್ತಲೇ ಇದ್ದಾರೆ. ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಡುತ್ತಿದ್ದಾರೆ. ಏನೇ ಗಂಭೀರ ಆರೋಗ್ಯ ಸಮಸ್ಯೆ ಉಂಟಾದರೂ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಥವಾ ಉಡುಪಿ ಜಿಲ್ಲೆಯ ಮಣಿಪಾಲಕ್ಕೆ ಹೋಗಬೇಕು. ಹೀಗಾಗಿ ಶೃಂಗೇರಿ ಪಟ್ಟಣದಲ್ಲಿ ಆಸ್ಪತ್ರೆ ನಿರ್ಮಿಸಲು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಬಂದ್ ನಡೆಸಿದ್ದಾರೆ.
‘ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ’ ಈ ಬಂದ್‌ಗೆ ಕರೆ ನೀಡಿದ್ದವು. ಶೃಂಗೇರಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಬಂದ್ ಭಾಗವಾಗಿ ಹಲವು ಸಿದ್ಧತೆಗಳನ್ನು ಮಾಡಿಕೊಂಡಿದ್ದ ಸಮಿತಿಯು ಪ್ರವಾಸಿಗರು ಮತ್ತು ಭಕ್ತರಿಗೆ ಶೃಂಗೇರಿಗೆ ಬರದಂತೆ ವಿನಂತಿಸಿಕೊಂಡಿದ್ದರು.
ಈ ಪ್ರದೇಶ ಒಂದು ಪ್ರಮುಖ ಸ್ಥಳವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೂ ಸ್ಥಳೀಯರಿಗೆ ಸುಸಜ್ಜಿತ ಆಸ್ಪತ್ರೆಯಿಲ್ಲದೆ ಪರವೂರು ಅವಲಂಬಿಸಬೇಕಾದ ಅನಿವಾರ್ಯತೆ ಎದುರಾಗಿದೆ.