ತಾ.ಪಂ.-ಜಿ.ಪಂ. ಚುನಾವಣೆ; ಮೀಸಲಾತಿ ಪ್ರಕಟಿಸಲು ಏಪ್ರಿಲ್ 1 ರವರೆಗೂ ಗಡುವು ಕೇಳಿದ ರಾಜ್ಯ ಸರ್ಕಾರ

ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ಸಂಬಂಧಿಸಿದಂತೆ ಮೀಸಲಾತಿ ಪಟ್ಟಿ ಇನ್ನೂ ಪ್ರಕಟವಾಗದಿದ್ದು, ಮೀಸಲಾತಿ ಪ್ರಮಾಣವನ್ನು ಏಪ್ರಿಲ್ 1ರ ಒಳಗಾಗಿ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್‌ ಪೀಠಕ್ಕೆ  ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕರ್ನಾಟಕ ಹೈಕೋರ್ಟಿಗೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಪಟ್ಟಿ ಪ್ರಕಟಿಸುವ ಬಗ್ಗೆ ಗಡುವು ಪಡೆದಿದೆ.

ಇದನ್ನು ಓದಿ: ಜಿಲ್ಲಾ-ತಾಲ್ಲೂಕು ಪಂಚಾಯಿತಿ ಮೀಸಲು ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜುಲೈ 8 ಕಡೆ ದಿನ

ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದುಕೊಂಡಿರುವ ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ಸರ್ಕಾರ ತಿದ್ದುಪಡಿ ತಂದಿರುವುದಕ್ಕೆ ರಾಜ್ಯ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನು ಓದಿ: ಸಾಮ್ರಾಜ್ಯಶಾಹಿ-ವಿರೋಧಿ ಹೋರಾಟ ಮತ್ತು ಚುನಾವಣಾ ಪರ್ಯಾಯ

ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಚ್ 1ರಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬಿಬಿಎಂಪಿ ಚುನಾವಣಾ ಸಂಬಂಧ ಸುಪ್ರೀಂ ಕೋರ್ಟ್ ಏಪ್ರಿಲ್ 1ರವರೆಗೆ ಕಾಲಾವಕಾಶ ನೀಡಿದೆ. ಅಷ್ಟರ ಒಳಗಾಗಿ ಮೀಸಲಾತಿ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್‌ ಜನರಲ್‌ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದರು.

ಈ ಹಿಂದೆ ನಡೆದ ವಿಚಾರಣೆ ವೇಳೆ ನಿಗದಿತ ಸಮಯಕ್ಕೆ ಚುನಾವಣೆ ಪ್ರಕ್ರಿಯೆ ನಡೆಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ 5 ಲಕ್ಷ ದಂಡ ವಿಧಿಸಿತ್ತು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *