ಬೆಂಗಳೂರು: ರಾಜ್ಯದಲ್ಲಿ ಅಲ್ಪಸಂಖ್ಯಾತರು, ಆದಿವಾಸಿ, ಬುಡಕಟ್ಟು ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪ್ರತಿನಿಧಿಗಳ ನಿಯೋಗಕ್ಕೆ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಭೇಟಿ ವೇಳೆ ನಿಯೋಗವು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನದ ಜಾರಿ ಕುರಿತು ಕಳವಳ ವ್ಯಕ್ತಪಡಿಸಿದೆ.
ಇದನ್ನೂ ಓದಿ:ಜುಲೈ-31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ: ಸಿಎಂ ಸಿದ್ದರಾಮಯ್ಯ
ಯುಸಿಸಿ ಆದಿವಾಸಿಗಳು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರಿಗೆ ಬೆದರಿಕೆಯಾಗಿದೆ. ಹಿಂದಿನ ಕಾನೂನು ಆಯೋಗವು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು, ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಯುಸಿಸಿ ಕಾರ್ಯಸಾಧ್ಯವಲ್ಲ ಎಂದು ಹೇಳಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಈ ವಿಷಯವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕಾನೂನು ಆಯೋಗಕ್ಕೆ ಮನವಿ ಮಾಡಿಕೊಂಡಿದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕಲು ಬಿಡುವುದಿಲ್ಲ. ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ಹೇಳಿದರು. ಬಳಿಕ ವಕ್ಫ್ ಆಸ್ತಿಗಳನ್ನು ರಕ್ಷಿಸುವಂತೆ ಹಾಗೂ ಅತಿಕ್ರಮಣಗಳ ತೆರವುಗೊಳಿಸುವಂತೆ ನಿಯೋಗವು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.
ನಿಯೋಗದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಕೆ.ರೆಹಮಾನ್ ಖಾನ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಮೌಲಾನಾ ಸೈಯದ್ ಮುಸ್ತಫಾ ರಫಾಯಿ ನದ್ವಿ, ತೌಲಾನಾ ಸೈಯದ್, ಹಶ್ಮಿ, ಮೌಲಾನಾ ಶಬೀರ್ ಅಹ್ಮದ್ ಹುಸೇನಿ ನದ್ವಿ, ಮುಫ್ತಿ ಇಫ್ತಿಕಾರ್, ಅಹ್ಮದ್ ಖಾಸ್ಮಿ ಇತರರಿದ್ದರು.