ವೈದ್ಯರ ನಿರ್ಲಕ್ಷ ; ರೋಗಿ ಸಾವು – ಸಾರ್ವಜನಿಕರ ಪ್ರತಿಭಟನೆ

ಚಿಕ್ಕಮಗಳೂರು:  ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ರೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ.

ತಾಲೂಕಿನ ಗುತ್ತಿ ಗ್ರಾಮದ ಸುಂದರೇಶ್ (31) ಚಿಕಿತ್ಸೆಗೆಂದು ಬಂದು ಮೃತಪಟ್ಟಿದ್ದು, ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಸುಂದರೇಶ್ ಮೃತಪಟ್ಟಿದ್ದಾರೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಮೃತ ಸುಂದರೇಶ್ ಪತ್ನಿ ರೇಣುಕಾ, ನಮಗೆ 1 ಗಂಡು, 1 ಹೆಣ್ಣು ಚಿಕ್ಕ-ಚಿಕ್ಕ ಮಕ್ಕಳಿದ್ದಾರೆ. ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದೆವು. ನನ್ನ ಪತಿಗೆ ಬೆಳಿಗೆ 4ಕ್ಕೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು, ಎದೆ ಭಾಗದಲ್ಲಿ ಉರಿ ಕಾಣಿಸಿಕೊಂಡು ಅಸ್ವರಾದಾಗ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದೇವೆ. ಆಸ್ಪತ್ರೆಯ ಒಳಗೆ ಹೋಗಲು ನನ್ನ ಪತಿಗೆ ಸಾಧ್ಯವಾಗಲಿಲ್ಲ.‌

ಇದನ್ನೂ ಓದಿ: ಗಣಿತ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವೀಲ್ ಚೇರ್ ತರಲು ಸಿಬ್ಬಂದಿ ಬಳಿ ಕೇಳಿಕೊಂಡಾಗ ಅವರು ವೀಲ್ ಚೇರ್ ತರಲಿಲ್ಲ. ಉಡಾಫೆಯಿಂದ ನನ್ನ ಪತಿಯ ಕುತ್ತಿಗೆ ಪಟ್ಟಿ ಹಿಡಿದು ಆಸ್ಪತ್ರೆಯ ಒಳ ಭಾಗಕ್ಕೆ ದೂಡಿದ್ದಾರೆ. ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರು ಇರಲಿಲ್ಲ. ದಾದಿಯೊಬ್ಬರು 4 ಮಾತ್ರೆಯನ್ನು ನೀಡಿ ಅದರಲ್ಲಿ ಒಂದನ್ನು ನನ್ನ ಪತಿಗೆ ಕುಡಿಸಿದ್ದಾರೆ. ಬೆಳಿಗ್ಗೆ, 10 ಗಂಟೆಯವರೆಗೆ ವೈದ್ಯರಾಗಲಿ ಅಥವಾ ಸಿಬ್ಬಂದಿಗಳಾಗಲಿ ಯಾರೊಬ್ಬರೂ ನನ್ನ ಪತಿಯ ಬಳಿ ಸುಳಿಯಲಿಲ್ಲ.

ಅಷ್ಟರಲ್ಲಿ ಅವರು ಮೃತರಾಗಿದ್ದರು, ನನಗೂ ಆರೋಗ್ಯ ಸರಿಯಿಲ್ಲ. ನನ್ನನ್ನು ಮತ್ತು ನನ್ನ ಮಕ್ಕಳನ್ನು ಸಾಕಲು ಯಾರು ಇಲ್ಲದೆ ಬೀದಿಗೆ ಬಿದ್ದಿದ್ದೇವೆ ಎಂದು ನೊಂದುಕೊಂಡರು.

ವಿಷಯ ತಿಳಿದು ಆಸ್ಪತ್ರೆ ಬಳಿ ಜಮಾಯಿಸಿದ ಗ್ರಾಮಸ್ಥರು ಮತ್ತು ಸಂಬಂಧಿಕರು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ ವೈದ್ಯಾಧಿಕಾರಿ ಮತ್ತು ಉಡಾಫೆಯಿಂದ ವರ್ತಿಸಿದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಮೃತದೇಹವನ್ನು ತೆಗೆದುಕೊಂಡು ಹೋಗುವುದಿಲ್ಲವೆಂದು ಪಟ್ಟು ಹಿಡಿದಾಗ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಯಿತು.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಹಂತಕ್ಕೆ ತಲುಪಿದಾಗ, ಪೊಲೀಸರು ಹೆಚ್ಚುವರಿ ಸಿಬ್ಬಂದಿಗಳನ್ನು ಕರೆಸಿಕೊಂಡು ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಿದರು. ತಹಶೀಲ್ದಾರ್ ರಾಜಶೇಖರ್ ಮೂರ್ತಿ ಆಸ್ಪತ್ರೆಗೆ ಧಾವಿಸಿ ಮೃತನ ಕುಟುಂಬಸ್ಥರು ಮತ್ತು ಸಾರ್ವಜನಿಕರ ಮನವೊಲಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಈ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರೆ ವೈದ್ಯರ ಪರವಾಗಿ ಮರಣೋತ್ತರ ಪರೀಕ್ಷಾ ವರದಿ ಬರುವ ಸಾಧ್ಯತೆಯಿದೆ.

ಹಾಗಾಗಿ ಇಲ್ಲಿ ಮರಣೋತ್ತರ ಪರೀಕ್ಷೆ ನಡೆಸುವುದು ಬೇಡ, ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಬೇಕು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ನಂತರ ಪ್ರತಿಭಟನಾಕಾರರನ್ನು ಆಸ್ಪತ್ರೆಯ ಸಭಾಂಗಣಕ್ಕೆ ಕರೆದೊಯ್ಯ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ರೋಗಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ತೋರಿದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.

ಕೂಡಲೇ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಸಭೆ ನಡೆಸಿ ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಲೋಪ ದೋಷವಾಗದಂತೆ ಕಟ್ಟೆಚ್ಚರ ವಹಿಸಬೇಕೆಂದು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಿಯಾಂಕ ಅವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹಿರಿಯ ವೈದ್ಯ ಡಾ. ಅನಂತಪದ್ಮನಾಭ ಆಸ್ಪತ್ರೆಗೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದರು.

ಸಿಬ್ಬಂದಿಯೊಬ್ಬ ರೋಗಿಯನ್ನು ತಳ್ಳಿದ್ದು, ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಇವೆಲ್ಲವೂ ಆಸ್ಪತ್ರೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಫುಟೇಜ್ ಪರಿಶೀಲಿಸಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ತಹಶೀಲ್ದಾರ್ ರಾಜಶೇಖರ್ ಮೂರ್ತಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು. ಪಿಎಸ್‌ಐ ಶ್ರೀನಾಥ್ ರ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಶ್ರಮಿಸಿದರು.

ನಂತರ ಮೃತನ ಕುಟುಂಬಸರು ನಮಗೆ ಮೃತದೇಹ ಬಿಟ್ಟು ಕೂಡಿ ಕೊಂಡೊಯುತ್ತವೆ ಎಂದು ಕೇಳಿಕೊಂಡಾಗ, ಮರಣೋತ್ತರ ಪರೀಕ್ಷೆ ನಡೆಸಿದರೆ ಸಾವು ಸಂಭವಿಸಿರುವ ಬಗ್ಗೆ ಖಚಿತತೆ ತಿಳಿಯುತ್ತದೆ, ಅಲ್ಲದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿವಾರವೂ ದೊರಕುತ್ತದೆ ಎಂದು ಮನವರಿಕೆ ಮಾಡಿದಾಗ ಮೃತನ ಪತ್ನಿ ರೇಣುಕಾ, ಮರಣೋತ್ತರ ಪರೀಕ್ಷೆ ನಡೆಸುವುದು ಬೇಡ ಹಾಗೆಯೇ ಮೃತದೇಹವನ್ನು ಬಿಟ್ಟು ಕೂಡಿ ನಾವು ಕೊಂಡೊಯುತ್ತವೆ ಎಂದಾಗ ಆಸ್ಪತ್ರೆಯ ಆಂಬುಲೆನ್ಸ್ ನಲ್ಲಿ ಮೃತ ದೇಹವನ್ನು ಕಳಿಸಿಕೊಡಲಾಯಿತು.

ನಂತರ ಆಸ್ಪತ್ರೆಗೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್‌ ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ಹರೀಶ್ ಬಾಬು ಆಸ್ಪತ್ರೆಯ ವೈದ್ಯಾಧಿಕಾರಿಗಳ ಸಭೆ ನಡೆಸಿ ರೋಗಿಗಳಿಗೆ ನೀಡುವ ಚಿಕಿತ್ಸೆಯಲ್ಲಿ ಲೋಪ ದೋಷವಾಗದಂತೆ ಕಟ್ಟೆಚ್ಚರ ವಹಿಸಬೇಕೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ, ಪ.ಪಂ. ಸದಸ್ಯ ಪಿ.ಜಿ.ಅನಕುಮಾರ್‌ ಕಂಡೇಗೌಡ ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಬ್ರಿಜೇಶ್ ಕರಿದಾಳು, ಸಂಜಯ್, ಚಂದ್ರು ಒಡೆಯಾ‌, ಪರಮೇಶ್‌, ಕಿರಣ್‌, ಪಿ.ಕೆ.ಮಂಜುನಾಥ್, ಮಹೇಶ್ ಉದುಸ, ಯು.ಬಿ.ನಾಗೇಶ್, ಪ್ರಭಾಕರ್ ಬಿನ್ನಡಿ, ಬಕ್ಕಿ ರವಿ, ಶಿವಪ್ರಸಾದ್, ರುದ್ರಯ್ಯ ಬಾವು, ಇತರರಿದ್ದರು.

ಇದನ್ನೂ ನೋಡಿ: ದೇವೇಗೌಡ್ರೆ.. ನಿಮ್ಮನ್ನು ಸಿಎಂ ಮಾಡಿದ್ದು ಯಾರು? ಸಿದ್ದರಾಮಯ್ಯ ಪ್ರಶ್ನೆ Janashakthi Media

Donate Janashakthi Media

Leave a Reply

Your email address will not be published. Required fields are marked *