ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯಕ್ಕೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನೆಲೆಯಲ್ಲಿ ಟಿಎಂಸಿ ಶಾಸಕಾಂಗ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಧಾನಿ ಕೋಲ್ಕತ್ತಾದಲ್ಲಿರುವ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರು ಮಮತಾ ಬ್ಯಾನರ್ಜಿ ಅವರಿಗೆ ಪ್ರಮಾಣವಚನ ಬೋಧಿಸಿದರು.
ಇದನ್ನು ಓದಿ: ಪಶ್ಚಿಮ ಬಂಗಾಳ: ಎಡರಂಗದ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಟಿಎಂಸಿಯಿಂದ ಹಿಂಸಾಚಾರ
ಕೋವಿಡ್-19 ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪದವಿ ಸ್ವೀಕಾರ ಸಮಾರಂಭವು ಅತ್ಯಂತ ಸರಳವಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಟಿಎಂಸಿ ಪಕ್ಷದ ಸುಬ್ರತಾ ಮುಖರ್ಜಿ, ಪಾರ್ಥ ಚಟರ್ಜಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಪಕ್ಷದ ಗೆಲುವಿಗೆ ಕಾರ್ಯತಂತ್ರರೂಪಿಸಿದ ಪ್ರಶಾಂತ್ ಕಿಶೋರ್ ಸಹ ಭಾಗವಹಿಸಿದ್ದರು.
ಬಳಿಕ ಮಾತನಾಡಿದ ಮಮತಾ, ’ಕೋವಿಡ್ ತಡಗಟ್ಟುವ ಬಗ್ಗೆ ನಾವು ಮೊದಲ ಆದ್ಯತೆ ನೀಡುತ್ತೇವೆ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾಡಲು ಶ್ರಮಿಸುತ್ತೇವೆ. ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದ ಕಾರಣ ಹಿಂಸಾಚಾರಗಳು ಸಂಭವಿಸಿವೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅವರು ಹೇಳಿದರು.
ಇದನ್ನೂ ಓದಿ: ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ತೀವ್ರ ಸೋಲು – ಸಿಪಿಐ(ಎಂ) ಪೊಲಿಟ್ ಬ್ಯುರೊ
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ ತಮ್ಮ ಕ್ಷೇತ್ರ ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದಾರೆ. ಆದರೆ ಟಿಎಂಸಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತಿದ್ದು ಮಮತಾರವರನ್ನೇ ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿ ಮುಖ್ಯಮಂತ್ರಿಯೆಂದು ಘೋಷಿಸಲಾಗಿದೆ.
ಈ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಮಾತ್ರ ಪ್ರಮಾಣ ವಚನ ಸ್ವೀಕರಿಸಿದ್ದು, ಇನ್ನಾವುದೇ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿಲ್ಲ.