ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಧಾರಾಕಾರ ಮತ್ತು ಇನ್ನು ಕೆಲವು ಪ್ರದೇಶಗಳಲ್ಲಿ ಜಿಟಿಜಿಟಿ ಮಳೆ ಮಂಗಳವಾರ ಬೆಳ್ಳಂಬೆಳಗ್ಗೆ ಸುರಿಯುತ್ತಿದ್ದು ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಕಚೇರಿ ಕೆಲಸ ಕಾರ್ಯಗಳಿಗೆ ಹೋಗುವವರಿಗೆ ಸಂಚಾರಕ್ಕೆ ಅಡ್ಡಿಯುಂಟಾಯಿತು. ಗುಡುಗು ಸಹಿತ ಮಳೆಯಾಗಿದ್ದು ಮೋಡ ಕವಿದ ವಾತಾವರಣವಿದೆ. ಜನರು ರೈನ್ ಕೋಟ್ ಧರಿಸಿ ಕೊಡೆ ಹಿಡಿದು ಮಳೆಯಿಂದ ರಕ್ಷಿಸಿಕೊಳ್ಳಲು ಓಡಾಡುತ್ತಿರುವುದು ಕಂಡುಬಂತು.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಮನ್ಸೂಚನೆ ಸಿಕ್ಕಿದ್ದು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ಕಾರ್ಪೊರೇಷನ್ ಸರ್ಕಲ್, ಶಿವಾಜಿನಗರ, ಕೆ.ಆರ್.ಮಾರ್ಕೆಟ್, ಮೈಸೂರು ರಸ್ತೆ, ಮಾಗಡಿ ರಸ್ತೆ, ವಿಜಯನಗರ, ಜಯನಗರ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ರಾಜಾಜಿನಗರ, ಯಶವಂತಪುರ, ಚಂದ್ರಾಲೇಔಟ್, ನಂದಿನಿ ಲೇಔಟ್, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಬನಶಂಕರಿ, ಬಸವನಗುಡಿ, ಹೆಬ್ಬಾಳ, ಯಲಹಂಕ, ಶ್ರೀನಗರ, ಆರ್.ಟಿ.ನಗರ ಸೇರಿ ಹಲವೆಡೆ ಮಳೆಯಾಗಿದೆ.
ಇದನ್ನೂ ಓದಿ:ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ!
ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಗೆ ನದಿಯಂತಾಗಿರುವ ಬೆಂಗಳೂರಿನ ಪ್ರಮುಖ ರಸ್ತೆಗಳಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಕೆಲದಿನ ಮಳೆ ಮುಂದುವರಿಕೆ, ಮುಂದಿನ ನಾಲ್ಕೈದು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಅಲ್ಲದೆ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಮಳೆ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.