ಬೆಂಗಳೂರು: ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನಂತೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮತ್ತು ಬೆಂಗಳೂರು ವಕೀಲರ ಸಂಘದ ವಿರೋಧದ ನಡುವೆಯೂ ರಾಜ್ಯ ಹೈಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ ಗಳಿಗೆ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಮೇ 1 ಗುರುವಾರದಂದು ಆದೇಶಿಸಿದೆ.
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿರುವ ಪ್ರತ್ಯೇಕ ಅಧಿಸೂಚನೆಗಳಲ್ಲಿ ಕೊಲಿಜಿಯಂ ಶಿಫಾರಸಿನಂತೆ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರನ್ನು ಒಡಿಶಾ, ನ್ಯಾಯಮೂರ್ತಿ ಕೆ.ನಟರಾಜನ್ ಅವರನ್ನು ಕೇರಳ, ನ್ಯಾಯಮೂರ್ತಿ ಎನ್.ಎಸ್.ಸಂಜಯ್ ಗೌಡ ಅವರನ್ನು ಗುಜರಾತ್ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ: ಫಾಜಿಲ್ ಹತ್ಯೆಯ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಕೊಲೆ
ಇತ್ತೀಚೆಗೆ ಹೈಕೋರ್ಟ್‌ನ ಕಲಾಪಗಳನ್ನು ಬಹಿಷ್ಕರಿಸಿದ ನಂತರ, ಬೆಂಗಳೂರಿನ ವಕೀಲರ ಸಂಘ (ಎಎಬಿ) ನಾಲ್ವರು ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಕೊಲಿಜಿಯಂನ ಪ್ರಸ್ತಾಪವನ್ನು ವಿರೋಧಿಸಿತ್ತು. ಅಲ್ಲದೆ, ಈ ಪ್ರಸ್ತಾವನೆಯನ್ನು ಪರಿಗಣಿಸದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿತ್ತು.
ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಉನ್ನತ ನ್ಯಾಯಾಲಯಗಳಲ್ಲಿ ಎಲ್ಲರನ್ನೂ ಒಳಗೊಳ್ಳುವಿಕೆ ಮತ್ತು ವೈವಿಧ್ಯತೆ ಕಾಪಾಡಲು ಮತ್ತು ನ್ಯಾಯದಾನದ ಗುಣಮಟ್ಟ ಎತ್ತರಿಸುವ ನಿಟ್ಟಿನಲ್ಲಿ ಏಪ್ರಿಲ್ 15 ಮತ್ತು 19ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ವರ್ಗಾವಣೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿತ್ತು.
ಇದನ್ನೂ ನೋಡಿ: ಸಿಲಿಂಡರ್ ಗೆ ಮಾಲಾರ್ಪಣೆ ಮಾಡಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ Janashakthi Media