ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ನಾಯಕ, ಕೇಂದ್ರದ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಇಂದು(ಜುಲೈ 06) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ ದೇಶದ ಅಭಿವೃದ್ಧಿಗಾಗಿ ನಖ್ವಿ ನೀಡಿದ ಕೊಡುಗೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ಉಪರಾಷ್ಟ್ರಪತಿ ಹುದ್ದೆಗಾಗಿ ಎನ್‌ಡಿಎ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಸಲಿದೆ ಎಂಬ ವರದಿಗಳ ಬೆನ್ನಲ್ಲೇ ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ನೀಡಿರುವುದು, ಅವರು ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಬಹುದು ಎಂಬ ವದಂತಿ ಹರಡಿದೆ.
ಆಡಳಿತ ಪಕ್ಷ ಬಿಜೆಪಿಯು ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಉಪರಾಷ್ಟ್ರಪತಿ ಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸುತ್ತಿದೆ. ಮುಕ್ತಾರ್ ಅಬ್ಬಾಸ್ ನಖ್ವಿ ಉಪರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯಾಗ್ತಾರೆ ಎಂಬ ಮಾತುಗಳು ಇವೆ.
ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜ್ಯಸಭಾ ಅವಧಿ ಗುರುವಾರಕ್ಕೆ ಮುಕ್ತಾಯವಾಗಲಿದೆ. ಆದರೆ ನಖ್ವಿ ಒಂದು ದಿನ ಮುಂಚೆಯೇ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಮುಖ್ತಾರ್ ಅಬ್ಬಾಸ್ ನಖ್ವಿ ಬಿಜೆಪಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಸಭೆ ನಂತರ ನಖ್ವಿ ಪ್ರಧಾನಿ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮೂಲಗಳ ಪ್ರಕಾರ, ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮುಖ್ತಾರ್ ಅಬ್ಬಾಸ್ ನಖ್ವಿ ಅವರೊಂದಿಗೆ ಆರ್‌ಸಿಪಿ ಸಿಂಗ್ ಇಬ್ಬರ ಕೊಡುಗೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಇದು ಅವರನ್ನು ಸಚಿವ ಸಂಪುಟದಿಂದ ಬೀಳ್ಕೊಡುವ ಮುನ್ನ ಮಾಡಿದ ಶ್ಲಾಘನೆ ಎನ್ನಲಾಗಿದೆ. ಆರ್‌ಸಿಪಿ ಸಿಂಗ್ ರಾಜೀನಾಮೆ ಬಗ್ಗೆ ಇಲ್ಲಿಯವರೆಗೆ ಯಾವುದೇ ಅಧಿಕೃತ ದೃಢೀಕರಣ ಸಿಕ್ಕಿಲ್ಲ. ಬಿಜೆಪಿಯ ರಾಜ್ಯಸಭಾ ನಾಮನಿರ್ದೇಶನ ಪಟ್ಟಿಯಿಂದ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ಹೆಸರನ್ನು ಬಿಡಲಾಗಿದೆ.
16ನೇ ಉಪರಾಷ್ಟ್ರಪತಿ ಆಯ್ಕೆಗಾಗಿ ಚುನಾವಣಾ ಆಯೋಗ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಅಧಿಸೂಚನೆ ಹೊರಡಿಸಿದ್ದು, ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ. ಜುಲೈ 19ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ.
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದು, ಮುಸ್ಲಿಂ ನಾಯಕರೊಬ್ಬರನ್ನು ಉಪರಾಷ್ಟ್ರಪತಿ ಹುದ್ದೆಗೆ ಪರಿಗಣಿಸಲು ಬಿಜೆಪಿ ಲೆಕ್ಕಾಚಾರ ನಡೆಸುತ್ತಿದೆ ಎನ್ನಲಾಗಿದೆ.
ಈ ನಡುವೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರದ ಮಾಜಿ ಸಚಿವೆ ನಜ್ಮಾ ಹೆಪ್ತುಲ್ಲಾ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಹೆಸರು ಸಹ ಉಪ ರಾಷ್ಟ್ರಪತಿ ಹುದ್ದೆಗೆ ಕೇಳಿಬರುತ್ತಿವೆ.