ಹಾವೇರಿ: ವಿದ್ಯಾರ್ಥಿಗಳು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಯಾವುದೇ ಭಯವಿಲ್ಲದೆ ಸಂಘಟಿತರಾಗಿ ಹೋರಾಟ ನಡೆಸಿದರೆ ನ್ಯಾಯ ಪಡೆಯಲು ಸಾಧ್ಯ. ವಿದ್ಯಾರ್ಥಿಗಳ ಐಕ್ಯ ಹೋರಾಟಗಳು ದೇಶದ ವ್ಯವಸ್ಥೆಯಲ್ಲಿ ಬದಲಾವಣೆ ತರಬಲ್ಲವು ಎಂಬುದಕ್ಕೆ ಇತ್ತೀಚಿನ ಹೋರಾಟಗಳೇ ಸಾಕ್ಷಿ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಬಸವರಾಜ ಕೋರಿಮಠ ಹೇಳಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ 9ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣ, ಪ್ರಜಾಪ್ರಭುತ್ವದ ರಕ್ಷಣೆ, ಜಿಲ್ಲೆಯ ಸೌಹಾರ್ದತೆ ಮತ್ತು ಸಮಗ್ರ ಅಭಿವೃದ್ಧಿ ಸಮ್ಮೇಳನದ ಪ್ರಮುಖ ಆಶಯಗಳಾಗಿದ್ದವು.
ಜಂತರ್ ಮಂತರ್ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ಧೈರ್ಯದಿಂದ ಪ್ರತಿಭಟನೆ ನಡೆಸಿದರು. ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಡುವಾಗ ಯಾರಿಗೂ ಹೆದರುವ ಅಗತ್ಯವಿಲ್ಲ. ಸಂಘಟಿತ ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದು ಕೋರಿಮಠ ಹೇಳಿದರು.
ಆಳುವ ವರ್ಗದ ಬಹುತೇಕರು ಆರ್ಥಿಕವಾಗಿ ಬಲಿಷ್ಠರಾಗಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸುವ ಮೂಲಕ ಬಡವರು ಗುಣಮಟ್ಟದ ಶಿಕ್ಷಣ ಪಡೆಯಲು ಕಷ್ಟವಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು.
ತಾವು ಕಾನೂನು ಪದವಿ ಪಡೆಯುತ್ತಿದ್ದ ಸಂದರ್ಭದಲ್ಲಿ ಶುಲ್ಕ ಕಡಿಮೆ ಇತ್ತು. ಆದರೆ ಇಂದು ಜಿಲ್ಲೆಗಳಲ್ಲಿ ಕಾನೂನು ಶಿಕ್ಷಣದ ವಾರ್ಷಿಕ ಶುಲ್ಕ ಸುಮಾರು ₹60 ಸಾವಿರಕ್ಕೆ ತಲುಪಿದ್ದು, ಬೆಂಗಳೂರಿನಲ್ಲಿ ₹1 ಲಕ್ಷಕ್ಕೂ ಅಧಿಕವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ದುಡಿಯುವ ವರ್ಗದ ಕುಟುಂಬಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಾಧ್ಯವೇ ಎಂಬುದನ್ನು ವಿದ್ಯಾರ್ಥಿಗಳು ಗಂಭೀರವಾಗಿ ಚಿಂತಿಸಬೇಕು ಎಂದು ಹೇಳಿದರು.
ಇದನ್ನೂ ಓದಿ : ನೈಸ್ ಯೋಜನೆ ಸರ್ಕಾರ ವಶಪಡಿಸಿಕೊಳ್ಳಲಿ: ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ನಿಯೋಗ ಮನವಿ
ಸಮ್ಮೇಳನದ ಮುಖ್ಯ ಅತಿಥಿಯಾಗಿ ಮಾತನಾಡಿದ ಎಸ್ಎಫ್ಐ ರಾಜ್ಯಾಧ್ಯಕ್ಷ ಶಿವಪ್ಪ ಅಂಬ್ಲೀಕಲ್, ಸರ್ಕಾರಿ ಶಾಲೆಗಳನ್ನು ಮುಚ್ಚಿ ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಕಾರ್ಪೊರೇಟ್ ಸಂಸ್ಥೆಗಳ ಮೂಲಕ ಹಣ ಸಂಗ್ರಹಿಸಿ ಶಾಲೆಗಳನ್ನು ನಡೆಸುವ ಪ್ರಸ್ತಾವನೆಗಳು ಶಿಕ್ಷಣದ ಮೇಲಿನ ಸರ್ಕಾರದ ಜವಾಬ್ದಾರಿಯನ್ನು ಕಡಿಮೆ ಮಾಡುವ ಅಪಾಯವಿದೆ ಎಂದರು.
ರಾಜ್ಯದಲ್ಲಿ ಸುಮಾರು ಒಂದು ಲಕ್ಷ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿ ನಿಲಯಗಳಲ್ಲಿ ಸಮರ್ಪಕ ಆಹಾರ ವ್ಯವಸ್ಥೆಯಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಇಂತಹ ಹಲವು ಸಮಸ್ಯೆಗಳಿದ್ದರೂ ಅವುಗಳನ್ನು ಪರಿಹರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಂಬ್ಲೀಕಲ್ ಟೀಕಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್ ಅವರಂತಹ ಹೋರಾಟಗಾರರು ಮಾಡಿದ ತ್ಯಾಗ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಸಿನಿಮಾ ನಟರು ಮಾದರಿಯಾಗುವುದಕ್ಕಿಂತ ಸಾಮಾಜಿಕ ಬದಲಾವಣೆಗಾಗಿ ಹೋರಾಡಿದವರ ಜೀವನವನ್ನು ಅಧ್ಯಯನ ಮಾಡಬೇಕು ಎಂದು ಅವರು ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ಕಾನೂನು ಕಾಲೇಜು ಇಲ್ಲ. ಬಹುತೇಕ ವಿದ್ಯಾರ್ಥಿಗಳು ರೈತ ಕುಟುಂಬಗಳಿಂದ ಬಂದವರಾಗಿದ್ದು, ತಂದೆ-ತಾಯಿಗಳು ದುಡಿದು ಮಕ್ಕಳ ಶಿಕ್ಷಣಕ್ಕೆ ಹಣ ಒದಗಿಸುತ್ತಿದ್ದಾರೆ. ಅವರ ಪರಿಶ್ರಮಕ್ಕೆ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ನಿರ್ಮಿಸುವ ಮೂಲಕ ಪ್ರತಿಫಲ ನೀಡಬೇಕು ಎಂದರು.
ಸರ್ಕಾರಿ ಶಾಲೆಗಳನ್ನು ಉಳಿಸುವುದು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು, ವಿದ್ಯಾರ್ಥಿಗಳಿಗೆ ಸಮರ್ಪಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸುವುದು ಹಾಗೂ ಡೊನೇಷನ್ ಹಾವಳಿ ತಡೆಯುವುದು ಸೇರಿದಂತೆ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳ ವಿರುದ್ಧ ಎಸ್ಎಫ್ಐ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟಗಳನ್ನು ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಶಿವಪ್ಪ ಅಂಬ್ಲೀಕಲ್ ಕರೆ ನೀಡಿದರು.
ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಪರಿಮಳ ಜೈನ್, ವಕೀಲ ನಾರಾಯಣ ಕಾಳೆ, ಎಸ್ಎಫ್ಐ ಮಾಜಿ ಜಿಲ್ಲಾಧ್ಯಕ್ಷೆ ರೇಣುಕಾ ಕಹಾರ ಹಾಗೂ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿದರು.
ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಹಿರಿಯ ಕಾರ್ಮಿಕ ಮುಖಂಡ ರುದ್ರಪ್ಪ ಜಾಬೀನ, ವಕೀಲ ರೆಹಾನ್ ಚನ್ನಪಟ್ಟಣ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅರುಣ್ ಕುಮಾರ್ ನಗವತ ಪ್ರಾಸ್ತಾವಿಕವಾಗಿ ಮಾತನಾಡಿದರು. ಚೈತ್ರಾ ಕೊರವರ ನಿರೂಪಿಸಿದರು. ಶೋಭಾ ದೇವರಮನೆ ಸ್ವಾಗತಿಸಿದರು. ದೀಪಾ ವಂದಿಸಿದರು. ವಿಠ್ಠಲ ಗೌಳಿ, ಹನುಮಂತಗೌಡ ಭರಮ್ಮಗೌಡ, ನಿಂಗರಾಜ ಪೂಜಾರ, ವೀರನಗೌಡ, ವಿಕಾಸ ದುರಗಣ್ಣನವರ, ಗೌತಮ್ ಸಾವಕ್ಕನವರ, ರವಿ ಬಂಕಾಪುರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಇದನ್ನೂ ನೋಡಿ : ಇಸ್ರೋ ವಿಜ್ಞಾನಿಗಳ ರಾಜೀನಾಮೆ: ಭವಿಷ್ಯದ ಬಾಹ್ಯಾಕಾಶ ಕನಸುಗಳಿಗೆ ಎಚ್ಚರಿಕೆಯ ಗಂಟೆ? Janashakthi Media
