ಉಪಚುನಾವಣೆ ಕದನ: ಕರ್ನಾಟಕ ಸೇರಿ 11 ರಾಜ್ಯಗಳಲ್ಲಿ ನಾಳೆ ಮತದಾನ

ಬೆಂಗಳೂರು: ಕರ್ನಾಟಕ ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗೆ ನಾಳೆ ಮತದಾನ ಪ್ರಕ್ರಿಯೆ ಇದೆ.

ಒಟ್ಟು 3 ಲೋಕಸಭಾ ಕ್ಷೇತ್ರಗಳು ಹಾಗೂ 29 ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯಲಿದೆ.

ಹರ್ಯಾಣ, ಬಿಹಾರ, ಮಹಾರಾಷ್ಟ್ರ, ತೆಲಂಗಾಣ, ಅಸ್ಸಾಂ, ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗವು ಸೆಪ್ಟಂಬರ್‌ 28ರಂದು ಪ್ರಕಟಣೆ ನೀಡಿತ್ತು.

ಚುನಾವಣಾ ಆಯೋಗ ಮತದಾನಕ್ಕೆ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಿಕೊಂಡು ಮತದಾನ ನಡೆಸಲಾಗುತ್ತದೆ.

ಸಿ. ಎಂ. ಉದಾಸಿ ನಿಧನದಿಂದ ತೆರವಾದ ಹಾನಗಲ್ ಮತ್ತು ಎಂ. ಸಿ. ಮನಗೂಳಿ ನಿಧನದಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲಾಗಿತ್ತು. ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

ಹಾನಗಲ್‌ ವಿಧಾನಸಭೆ

ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ನಾಳೆ ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಮತದಾನ ನಡೆಯಲಿದೆ. ವ್ಯವಸ್ಥಿತ ಮತದಾನಕ್ಕಾಗಿ ಹಾನಗಲ್‌ ಕ್ಷೇತ್ರ ವ್ಯಾಪ್ತಿಯಲ್ಲಿ 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1,155 ಸಿಬ್ಬಂದಿಯನ್ನು ನಿಯೋಜಿಸಿ ತರಬೇತಿ ನೀಡಲಾಗಿದೆ. ಒಟ್ಟು 2,04,481 ಮತದಾರರಿದ್ದಾರೆ. ಒಂದು ‘ಅಂಗವಿಕಲ ಸ್ನೇಹಿ’ ಮತಗಟ್ಟೆ ಹಾಗೂ ಎರಡು ‘ಸಖಿ’ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 121 ಮತಗಟ್ಟೆಗಳಲ್ಲಿ  ‘ವೆಬ್ ಕಾಸ್ಟಿಂಗ್’ ಸೌಲಭ್ಯ ಕಲ್ಪಿಸಲಾಗಿದೆ.

ಹಾವೇರಿ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನ.2ರಂದು ಬೆಳಿಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಹಾಗೂ ಜೆಡಿಎಸ್‌ ಅಭ್ಯರ್ಥಿ ನಿಯಾಜ್‌ ಶೇಖ್‌ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸಿಂದಗಿ ವಿಧಾನಸಭೆ

ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತದಾನಕ್ಕೆ ಸಂಬಂಧಿಸಿದಂತೆ ಒಟ್ಟು 297 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮತದಾನ ಕಾರ್ಯಕ್ಕೆ 1,308 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 2,34,584 ಮತದಾರರಿದ್ದಾರೆ.

ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನ.2 ರಂದು ಬೆಳಿಗ್ಗೆ 8 ರಿಂದ ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್‌ ಅಭ್ಯರ್ಥಿ ಅಶೋಕ ಮನಗೂಳಿ, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ, ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಸೇರಿದಂತೆ ಪಕ್ಷೇತರರು ಕಣದಲ್ಲಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *