ಕಾರವಾರ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅಬ್ಬರಿಸುತ್ತಿರುವ ಮಳೆ ಬುಧವಾರವೂ ಮುಂದುವರಿದಿದ್ದು, ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂನ್ 25ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಪ್ರತಿ ಗಂಟೆಗೆ 45 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕಾರವಾರದಲ್ಲಿ 32.5 ಮಿಮೀ, ಅಂಕೋಲಾ 42.9 ಮಿಮೀ, ಕುಮಟಾ 35.3 ಮಿಮೀ, ಹೊನ್ನಾವರ 38.2 ಮಿಮೀ ಹಾಗೂ ಭಟ್ಕಳದಲ್ಲಿ 41.7 ಮಿಮೀ ಮಳೆ ಸುರಿದಿದೆ. ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಗಾ, ಚೆಂಡಿಯಾ ಗ್ರಾಮಗಳಲ್ಲಿ ಜನವಸತಿ ಪ್ರದೇಶಗಳಿಗೆ ನೀರು ನುಗ್ಗುವಂತಾಗಿತ್ತು. ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿತ್ತು. ಈ ಭಾಗದ ನಿವಾಸಿಗಳು ತಮ್ಮ ವಸ್ತುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಲು ಪರದಾಡುವಂತಾಯಿತು. ಹೆದ್ದಾರಿ ಅಗಲೀಕರಣ ಕಾರ್ಯ ಕೈಗೊಂಡಿರುವ ಐಆರ್‌ಬಿ ನಿರ್ಲಕ್ಷ್ಯದಿಂದಾಗಿ ಮತ್ತು ನೌಕಾನೆಲೆಯ ಅರೆಬರೆ ಕಾಮಗಾರಿಯಿಂದ ನೀರು ಸಮುದ್ರ ಸೇರಲು ಅಡ್ಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಬಗ್ಗೆ ಕೆಎಸ್‌ಎನ್‌ಡಿಎಂಸಿ ಸೂಚನೆ ನೀಡಿದ್ದು, ಜೂ. 25 ರವರೆಗೆ ಭಾರೀ ಮಳೆಯಾಗುವ ಬಗ್ಗೆ ಆರೆಂಜ್ ಅಲರ್ಟ್ ನೀಡಿದೆ. ಇದೇ ಕಾರಣಕ್ಕೆ ಸಾರ್ವಜನಿಕರು, ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಕೂಡ ಎಚ್ಚರಿಕೆ ನೀಡಿದೆ. ಕೇವಲ ಒಂದು ದಿನ ಸುರಿದ ಮಳೆಯೇ ಇಷ್ಟೆಲ್ಲ ಅವಾಂತರ ಸೃಷ್ಟಿಸಿದ್ದು ಜನರು ಪರದಾಡುವಂತಾಗಿದೆ. ಇನ್ನೂ ನಾಲ್ಕೈದು ದಿನಗಳು ಭಾರೀ ಮಳೆ ಸುರಿಯುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು ಇದು ತಗ್ಗು ಪ್ರದೇಶದ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.