ಉತ್ತರಕಾಶಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ ಬೆನ್ನಲ್ಲೇ ಎಲ್ಲ ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದಾರೆ.
ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೇ ಕಾರ್ಮಿಕರು ಗುಣಮುಖರಾಗಿ ಮನೆಗೆ ಮರಳುವ ವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಕಾರ್ಮಿಕರು ಬರೋಬ್ಬರಿ 17 ದಿನಗಳಿಂದ ಸುರಂಗದೊಳಗೆ ಸಿಲುಕಿದ್ದರು. ಆದರೆ ಕಾರ್ಮಿಕ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಪ್ರತಿಕೂಲ ಹವಾಮಾನ ಪರಿಸ್ಥಿತಿ, ಯಂತ್ರಗಳಲ್ಲಿನ ಸಮಸ್ಯೆ ಕಾರಣದಿಂದಾಗಿ ರಕ್ಷಣಾ ಕಾರ್ಯಕ್ಕೆ ಒಂದಲ್ಲ ಒಂದು ಸವಾಲು ಎದುರಾಗುತ್ತಲೇ ಇತ್ತು.
ಇದನ್ನೂ ಓದಿ: ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ| ಕಾರ್ಯಚರಣೆ ಯಶಸ್ವಿ
ಕೊನೆಗು ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿ ಕಾರ್ಮಿಕರನ್ನು ಎನ್ಡಿಆರ್ಎಫ್ ಸಿಬ್ಬಂದಿ 17 ದಿನಗಳ ಕಾರ್ಯಾಚರಣೆ ಬಳಿಕ ಸೋಮವಾರ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಮಧ್ಯೆ, ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸಂತಸ ವ್ಯಕ್ತಪಡಿಸಿದ್ದು, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿರುವ ಅವರು ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕ ಬಂಧುಗಳು ಸುರಕ್ಷಿತವಾಗಿ ವಾಪಸ್ ಬಂದಿರುವುದು ಸಂತಸದ ಸುದ್ದಿ. ಅವರಿಗೆ ಮತ್ತು ಅವರ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.
ಭಾರತವನ್ನು ಕಟ್ಟುತ್ತಿರುವ ನಮ್ಮ ಕಾರ್ಮಿಕ ಬಂಧುಗಳ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ. ಈ ಕಠಿಣ ಅಭಿಯಾನವನ್ನು ಯಶಸ್ವಿಗೊಳಿಸಿದ ಎಲ್ಲ ವೀರ ಪುರುಷರಿಗೆ ನಾನು ವಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
उत्तरकाशी की सिलक्यारा सुरंग में फंसे श्रमिक भाइयों की सुरक्षित वापसी बहुत ही खुशी का समाचार है। उन्हें और उनके परिवारों को मेरी दिली बधाई।
भारत का निर्माण करने वाले हमारे मज़दूर भाइयों की सुरक्षा सर्वोपरि है। इस मुश्किल अभियान को सफल बनाने वाले सभी जांबाज़ों को मेरा सलाम है।…
— Rahul Gandhi (@RahulGandhi) November 28, 2023
ವಿಡಿಯೋ ನೋಡಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ?) ಬಹಿರಂಗ ಚರ್ಚೆಗೆ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗರ ವಿರೋಧ ಯಾಕೆ?