ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇ.ಡಿ ಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಹಾಗೂ ಸಿಎಂ, ಡಿಸಿಎಂ ಹೆಸರು ಹೇಳಲು ಅಧಿಕಾರಿಗಳಿಗೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪೋಸ್ಟರ್ ಗಳನ್ನು ಪ್ರದರ್ಶನ ಮಾಡುವ ಮೂಲಕ ಪ್ರತಿಪಕ್ಷಗಳ ವಿರುದ್ಧ ಇ.ಡಿ, ಸಿಬಿಐ, ಐಟಿ ಬಳಸುತ್ತಿರುವ ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆ ನೀಡಲಿ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸರ್ಕಾರದ ಶಾಸಕರು ಮುಖಂಡರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ವಾಲ್ಮೀಕಿ ಹಗರಣ ವಿಚಾರವಾಗಿ. ಎಸ್ ಐ ಟಿ ಅಧಿಕಾರಿಗಳು ವರ್ಗಾವಣೆ ಆದ ಬಹುತೇಕ ಹಣವನ್ನು ರಿಕವರಿ ಮಾಡಿದ್ದಾರೆ. ಇ.ಡಿ ಮಧ್ಯಪ್ರವೇಶದ ಅವಶ್ಯಕತೆ ಏನಿದೆ? ನಮ್ಮ ಮಂತ್ರಿ, ಶಾಸಕರು ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆ. ಬಲವಂತವಾಗಿ ನಮ್ಮ ಸರ್ಕಾರಿ ಅಧಿಕಾರಿಗೆ ನೀನು ಸಿಎಂ, ಹಾಗೂ ಡಿಸಿಎಂ ಹೆಸರು ಹೇಳಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದರು.
ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದರು.ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿ ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದು ಇಡಿ ದುರೂಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಪಕ್ಷದ ವರಿಷ್ಠರು ಕೂಡ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ ಎಂದರು.
ನಾವು ಕೂಡ ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್. ಐ ಟಿ ತನಿಖೆ ಮುಗಿದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣ ಮಾಡುವುದಿಲ್ಲ ಎಂದರು. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು.
ಇದನ್ನೂ ಓದಿ : ಎಚ್.ಡಿ.ಕುಮಾರಸ್ವಾಮಿ ಕೂಡ ಮೈಸೂರು ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ: ಎಂ.ಲಕ್ಷ್ಮಣ್ ಆರೋಪ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿವೆ. ಎಸ್.ಐ.ಟಿ ಯನ್ನು 31-5.2024 ರಂದು ರಚಿಸಲಾಗಿದೆ. 3-6-2024 ರಂದು ಸಿಬಿಐ ಗೆ ಬ್ಯಾಂಕ್ ವತಿಯಿಂದ ದೂರು ನೀಡಲಾಗಿದೆ. ಅದರಲ್ಲಿ ಶುಚಿ ಸ್ಮಿತಾ ರಾವುಲ್, ದೀಪಾ ಹಾಗು ಕೃಷ್ಣಮೂರ್ತಿ ಇವರ ಮೇಲೆ ದೂರು ನೀಡಲಾಗಿದೆ. ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡುತ್ತಿದೆ. ಒಂದೇ ಹಗರಣದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿರುವುದು ವಿಶೇಷ. ಮೂರು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ಬಗ್ಗೆ ತನಿಖೆ ಮಾಡುವುದು ಈವರೆಗೆ ನನ್ನ ಅನುಭವಕ್ಕೆ ಬಂದಿರಲಿಲ್ಲ ಎಂದರು.
ನಾವು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿಲ್ಲ. ವಿರೋಧ ಪಕ್ಷದವರು ಪದೇ ಪದೇ 187.33 ಕೋಟಿ ರೂ.ಗಳ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ . ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ ರಸ್ತೆ ಶಾಖೆಯಿಂದ ತೆಲಂಗಾಣಕ್ಕೆ ಹೋಗಿರುವುದು 89.63 ಕೋಟಿ ರೂ.ಗಳು. ಎಸ್. ಐ.ಟಿ ರಚನೆಯಾದ ಮೇಲೆ ತ್ವರಿತವಾಗಿ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ 12 ಜನರನ್ನು ಬಂಧಿಸಿದ್ದು, ಬೇರೆ ಬೇರೆ ಜನರು ಹಂಚಿಕೊಂಡಿದ್ದ ಮೊತ್ತದಲ್ಲಿ 34 ಕೋಟಿ ರೂಪಾಯಿ ನಗದನ್ನು ಹಿಂಪಡೆದಿದ್ದಾರೆ.
89.63 ಕೋಟಿ . 46 ಕೋಟಿ ರೂ.ಗಳನ್ನು ಫ್ಸ್ತ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ , ರತ್ನಾಕರ ಬ್ಯಾಂಕ್ ಲೀ., ನಲ್ಲಿ 46 ಕೋಟಿ ರೂಪಾಯಿ ಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ಒತ್ತು 85.25 ಕೋಟಿ ಹಿಂಪಡೆದು , ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಒಟ್ಟು ಅಕ್ರಮವಾಗಿರುವುದು 85.63 ಕೋಟಿಗಳು. ಎಸ್. ಐ ಟಿ ಅವರು ಶೇ.95% ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದರು.
ನಾವು ಅನೇಕ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇವೆ. ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಪರೇಶ್ ಮೆಹ್ತಾ, ರವಿ, ಗಣಪತಿ, ಲಾಟರಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಲಾಗಿದೆ. ಸರ್ಕಾರ ವಿವೇಚನೆಯನ್ನು ಆಧರಿಸಿ ಪ್ರಕರಣಗಳನ್ನು ವಹಿಸುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿಗಳು ಪ್ರಕಾರ 25 ಕೋಟಿ ರೂಪಾಯಿ ಗಿಂತ ಹೆಚ್ಚಿನ ಮೊತ್ತವಿದ್ದರೆ ಸಿಬಿಐ ತನಿಖೆ ಮಾಡಬಹುದು.
ತನಿಖೆಗೆ ನಮ್ಮ ತಕರಾರಿಲ್ಲ. ಆದರೆ ಕಾನೂನು ಬಾಹಿರವಾಗಿ ತನಿಖೆ ಮಾಡುವುದನ್ನು ಖಂಡಿಸುತ್ತೇವೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಮಾಡುತ್ತಿದ್ದು ಇದನ್ನು ಖಂಡಿಸಲು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿಯೂ ಇದನ್ನು ನಾವು ಪ್ರಸ್ತಾಪಿಸಲಿದ್ದೇವೆ ಎಂದರು.