ವಸತಿ ನಿಲಯಗಳ ಹೆಚ್ಚಳ, ವಿದ್ಯಾರ್ಥಿ ವೇತನ-ಫಲಿತಾಂಶ ಬಿಡುಗಡೆಗಾಗಿ ಎಐಡಿಎಸ್‌ಒ ಪ್ರತಿಭಟನೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ-2020) ಅಡಿಯಲ್ಲಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಫಲಿತಾಂಶ, ಪೂರ್ಣ ಪ್ರಮಾಣದ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು ಮತ್ತು ವಿದ್ಯಾರ್ಥಿ ವಸತಿ ನಿಲಯಗಳನ್ನು ಹೆಚ್ಚಿಸಬೇಕೆಂದು ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌(ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷ ಅಭಯಾ ದಿವಾಕರ್ ಮಾತನಾಡಿ “ರಾಜ್ಯದ ಪದವಿ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಸರ್ಕಾರ ಅತ್ಯಂತ ನಿರ್ಲಕ್ಷ್ಯ ತೋರಿಸುತ್ತಿದೆ. ಈಗಾಗಲೇ ಎನ್‌ಇಪಿ ಮೊದಲ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ಮುಗಿದು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೆ ಫಲಿತಾಂಶ ಮಾತ್ರ ಬಿಡುಗಡೆಯಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ಈ ಕೂಡಲೇ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆ ಆಗಬೇಕು.  ವಿದ್ಯಾರ್ಥಿ ವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಭಿತರು ಕಂಗಾಲಾಗಿದ್ದಾರೆ ಎಂದರು.

ಒಂದೆಡೆ ವಿದ್ಯಾರ್ಥಿ ವೇತನದ ಹಕ್ಕನ್ನು ಸರ್ಕಾರ ಕಸಿಯುತ್ತಿದೆ, ಇನ್ನೊಂದೆಡೆ ಪ್ರತಿವರ್ಷದಂತೆ ಶೈಕ್ಷಣಿಕ ಶುಲ್ಕವನ್ನು ಏರಿಕೆ ಮಾಡುತ್ತಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಈಗಾಗಲೇ ಮೂರು ಬಾರಿ ಪದವಿ ಶುಲ್ಕವನ್ನು ಏರಿಕೆ ಮಾಡಲಾಗಿದೆ. ಈ ಕೂಡಲೇ ವಿದ್ಯಾರ್ಥಿ ವಿರೋಧಿ ನಿಲುವನ್ನು ಸರ್ಕಾರ ಕೈಬಿಡಬೇಕು ಮತ್ತು ಸಂಪೂರ್ಣ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದರು.

ಅಲ್ಲದೆ, ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳು ಇಲ್ಲ. ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಬದ್ದತೆಯಿಂದ ಮುಂದುವರೆಸಲು ಮೂಲಭೂತ ಸೌಕರ್ಯಗಳು ಅವಶ್ಯವಾಗಿದ್ದು, ಅದರಲ್ಲಿ ಪ್ರಮುಖವಾಗಿ ವಿದ್ಯಾರ್ಥಿ ನಿಲಯವು ಒಂದಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು ದಾಖಲಾತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಪ್ರತಿಭಟನಾ ಸಭೆಯ ಅಧ್ಯಕ್ಷ್ಯತೆಯನ್ನು ಜಿಲ್ಲಾ ಕಾರ್ಯದರ್ಶಿ ಕಲ್ಯಾಣ್ ವಹಿಸಿದ್ದರು. ಪ್ರತಿಭಟನೆಯಲ್ಲಿ ಹಲವಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಪದವಿ ವಿದ್ಯಾರ್ಥಿಗಳ ಫಲಿತಾಂಶ-ವಿದ್ಯಾರ್ಥಿ ವೇತನ-ವಸತಿ ಸೌಲಭ್ಯಕ್ಕಾಗಿ ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *