ಬೆಂಗಳೂರು: ಶಿರವಸ್ತ್ರ ವಿವಾದದ ಹಿನ್ನೆಲೆಯಲ್ಲಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪರೀಕ್ಷೆ ನಿರಾಕರಿಸಲಾಗುತ್ತಿದೆ ಎಂಬ ಘಟನೆಯನ್ನು ಖಂಡಿಸಿರುವ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ(ಎಐಡಿಎಡಬ್ಲ್ಯೂಎ)ಯು ಪ್ರಾಯೋಗಿಕ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರನ್ನು ಒಳಗೆ ಬಿಡದೇ ಪೋಲೀಸ್ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವ ಪ್ರಾಂಶುಪಾಲರ ವರ್ತನೆಯನ್ನು ಖಂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎಐಡಿಡಬ್ಲ್ಯೂಎ ರಾಜ್ಯ ಅಧ್ಯಕ್ಷೆ ದೇವಿ ಅವರು, ಕರ್ನಾಟಕದಲ್ಲಿ ಶಿಕ್ಷಣದ ಮುಂದುವರೆಕೆಗೆ ಪದವಿ ಪೂರ್ವ ಶಿಕ್ಷಣವು ಅತಿ ಪ್ರಮುಖ ಘಟ್ಟವಾಗಿದೆ. ಇಡೀ ವರ್ಷದ ವಿದ್ಯಾರ್ಥಿಗಳ ಪರಿಶ್ರಮವನ್ನು, ಶೈಕ್ಷಣಿಕ ವರ್ಷದ ಅಂತಿಮ ಹಂತದಲ್ಲಿ ಅನಗತ್ಯ ವಿವಾದ ಎಬ್ಬಿಸಿ ಬಹುತೇಕ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪದವಿ ಶಿಕ್ಷಣದಿಂದ ಹೊರದಬ್ಬಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಎಐಡಿಡಬ್ಲ್ಯೂಎ ರಾಜ್ಯ ಕಾರ್ಯದರ್ಶಿ ಗೌರಮ್ಮ ಅವರು, ಈಗಾಗಲೇ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಸರಿಯಾಗಿ ಅರ್ಥೈಸದೆ ಜಾರಿಗೊಳಿಸಲಾಗಿದೆ ಎಂಬ ವ್ಯಾಪಕ ದೂರುಗಳು ಕೇಳಿಬಂದಿವೆ. ಈಗ ನ್ಯಾಯಾಲಯದ ಆದೇಶಕ್ಕಾಗಿ ಕಾಯಲಾಗುತ್ತಿದೆ. ಈ ಮಧ್ಯೆ ಪರೀಕ್ಷೆ ನಡೆಸುವುದು ಅತ್ಯಗತ್ಯವೆಂದರೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವೆ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ.
ಬಾದಿತ ವಿದ್ಯಾರ್ಥಿನಿಯರಿಗೆ ವಿಶೇಷ ಅವಕಾಶ ಕಲ್ಪಿಸಿ ಮರುಪರೀಕ್ಷೆ ನಡೆಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಆಗ್ರಹಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.