ಸುಪ್ರೀಂ ಕೋರ್ಟ್‌: ಯಡಿಯೂರಪ್ಪ, ಮುರುಗೇಶ್ ನಿರಾಣಿ ವಿರುದ್ಧದ ಪ್ರಕರಣ ದೀಪಾವಳಿ ಬಳಿಕ ವಿಚಾರಣೆ ಆರಂಭ

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಕುರಿತು ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದೀಪಾವಳಿ ಬಳಿಕ ಆರಂಭವಾಗಲಿದೆ.

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಡಿನೋಟಿಫೈ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಲಂ ಪಾಷಾ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರ ಅರ್ಜಿಯನ್ನು ತಕ್ಷಣವೇ ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸಿದರು.

ಮುಂದಿನ ತಿಂಗಳು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಪೀಠದಲ್ಲಿ ವಿಚಾರಣೆ ನಡೆಸಲು ಪಟ್ಟಿ ಮಾಡಬೇಕೆಂದು ಸೂಚಿಸಿದ್ದಾರೆ.

ತನಿಖೆಗೆ ಸುಪ್ರೀಂಕೋರ್ಟ್​ ಮಧ್ಯಂತರ ತಡೆ

ಮತ್ತೊಂದು ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪ‌ ವಿರುದ್ಧದ ಬೆಂಗಳೂರಿನ ಕೊನದಾಸಪುರದಲ್ಲಿ ಬಿಡಿಎ ಫ್ಲಾಟ್ ನಿರ್ಮಾಣದಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ. ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಡೆ ನೀಡಬೇಕು. ತನಿಖೆಗೆ ರಾಜ್ಯಪಾಲರ ಪೂರ್ವಾನುಮತಿ ಅಗತ್ಯ ಎಂದು ಯಡಿಯೂರಪ್ಪ ಪರ ವಕೀಲರು ಇಂದು(ಅಕ್ಟೋಬರ್‌ 14) ಸುಪ್ರೀಂಕೋರ್ಟ್​ನಲ್ಲಿ ವಾದಿಸಿದ್ದರು.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ತನಿಖೆಗೆ ತಡೆ ನೀಡಿ ಆದೇಶ ನೀಡಿದೆ.

ಸಚಿವ ಎಸ್.ಟಿ.ಸೋಮಶೇಖರ್ ಈ ಹಿಂದೆ ಬಿಡಿಎ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಕೂಡ ಆರೋಪಿಯಾಗಿದ್ದಾರೆ. ಒಟ್ಟು 9 ಮಂದಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಪ್ರತಿವಾದಿಗಳಿಗೆ ನೊಟೀಸ್ ಜಾರಿ ಮಾಡಿರುವ ನ್ಯಾಯಾಲಯ 4 ವಾರಗಳ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.

ಇದೇ ವೇಳೆ ವಿಜಯೇಂದ್ರ ಸೇರಿ ಉಳಿದವರ ವಿರುದ್ಧದ ತನಿಖೆ ಮುಂದುವರಿಯಲು ಯಾವುದೇ ಅಡ್ಡಿ ಇಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ ಪ್ರಕರಣದಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಲೋಕಾಯುಕ್ತಕ್ಕೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು.

Donate Janashakthi Media

Leave a Reply

Your email address will not be published. Required fields are marked *